Home / ರಾಜ್ಯ / ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ

ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಾಗಾರ ನಿರ್ಮಾಣ, ಲಾಂಡ್ರಿ ಕೊಠಡಿ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಕಾರ್ಯಕ್ರಮ ಶನಿವಾರ ನೆರವೇರಿತು. ಸುಮಾರು 169 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಆರ್. ರಾಜೇಂದ್ರ ಅವರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ಶವಾಗಾರ ಮತ್ತು ಲಾಂಡ್ರಿ ಕೊಠಡಿ ನಿರ್ಮಾಣದಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅವರು ಮುಂದಿನ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಇದೇ ತಿಂಗಳ 12ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಅವರು ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಸಭೆ ನಡೆಯಲಿದೆ ಎಂದು ಹೇಳಿದರು.
ಅದೇ ರೀತಿ ಏಪ್ರಿಲ್ 3ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧುಗಿರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಮಧುಗಿರಿ ಪಟ್ಟಣದಲ್ಲಿ ಒಂದು ಕಾರ್ಯಕ್ರಮ ನಡೆಸಲಾಗಿದ್ದು, ಈ ಬಾರಿ ಐಡಿಯಳ್ಳಿ ಹೋಬಳಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ಮಧುಗಿರಿ ತಾಲೂಕಿಗೆ ಇನ್ನಷ್ಟು ಅಭಿವೃದ್ಧಿ ತರುವ ಉದ್ದೇಶದಿಂದ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ತಾಲೂಕಿಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಮುಖ್ಯಮಂತ್ರಿ ಅವರ ಬಳಿ ಮನವಿ ಸಲ್ಲಿಸಲಾಗುವುದು ಎಂದು ಆರ್. ರಾಜೇಂದ್ರ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಶುಭ ಹಾರೈಸಿದರು.

ವರದಿ ಹರೀಶ್ ಸಿ ಎ

Leave a Reply

Your email address will not be published. Required fields are marked *