ಮಧುಗಿರಿ, ಏ.30:ತಾಲ್ಲೂಕಿನ ಐ.ಡಿ. ಹಳ್ಳಿ ಹೋಬಳಿ ಪಂಚಾಯಿತಿಯ ಗರಣಿ ಗ್ರಾಮದಲ್ಲಿ “ಹರ್ ಘರ್ ಜಲ್” ಗ್ರಾಮ ಸಭೆ
ಗುರುವಾರ ಬೆಳಿಗ್ಗೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.
ಸಭೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಬಿ.ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಗ್ರಾಮಸ್ಥರ ಸಹಕಾರ ಅತ್ಯಗತ್ಯವೆಂದು ಹೇಳಿದರು.
ಈ ಸಂದರ್ಭದಲ್ಲಿ ಜೆಜೆಎಂ ಯೋಜನೆಯ ಇಂಜಿನಿಯರ್ ಭರತ್ ಕುಮಾರ್ ತಾಂತ್ರಿಕ ಅಂಶಗಳು ಹಾಗೂ ನೀರಿನ ಸರಬರಾಜು ವ್ಯವಸ್ಥೆ ಕುರಿತು ಮಾಹಿತಿ ನೀಡಿದರು. ಸಂವಹನಾಧಿಕಾರಿ ರಾಧಾ ಅವರು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮಹತ್ವವನ್ನು ವಿವರಿಸಿ, ಸ್ವಚ್ಛತೆ ಮತ್ತು ಆರೋಗ್ಯದ ಕುರಿತು ಜಾಗೃತಿ ಮೂಡಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸಕ್ರಿಯವಾಗಿ ಪಾಲ್ಗೊಂಡು, ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಸ್ಯೆಗಳ ಬಗ್ಗೆ ತಮ್ಮ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಹಂಚಿಕೊಂಡರು. ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ಕಾರ್ಯಕ್ರಮದ ಅಂತ್ಯದಲ್ಲಿ, ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಸ್ವಚ್ಛ ಮತ್ತು ಆರೋಗ್ಯಕರ ಗ್ರಾಮ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಲಾಯಿತು. ಗ್ರಾಮಸ್ಥರ ಉತ್ತಮ ಸ್ಪಂದನೆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಯಿತು: ವರದಿ ಹರೀಶ್ ಸಿ ಎ










