ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೊಸಕೆರೆ ಕ್ಲಸ್ಟರ್ ಮಟ್ಟದ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರ ಜವಾಬ್ದಾರಿ, ಶಾಲಾ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವಿಕೆ, ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಸಮಿತಿಯ ಪಾತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಇಸಿಓ ಶ್ರೀನಿವಾಸ್ ಅವರು ಭಾಗವಹಿಸಿ, ಶಾಲೆಗಳ ಸಮಗ್ರ ಅಭಿವೃದ್ಧಿಗೆ ಎಸ್‌ಡಿಎಂಸಿ ಸದಸ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಶಾಲೆಯ ಅಭಿವೃದ್ಧಿಗೆ ಸಮಿತಿಯ ಸದಸ್ಯರು ಶಿಕ್ಷಕರೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಿಆರ್‌ಪಿ ರಂಗನಾಥ್ ಅವರು ಮಾತನಾಡಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡಲು ಎಸ್‌ಡಿಎಂಸಿ ಸಮಿತಿ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಎಚ್. ಬಸವನಹಳ್ಳಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮರಾಜು, ಉಪಾಧ್ಯಕ್ಷೆ ಸರೋಜಾ ಲಕ್ಷ್ಮಣ್, ಮುಖ್ಯೋಪಾಧ್ಯಾಯರಾದ ತುಪ್ಪೀರಮ್ಮ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಸುಗುಣ, ವಾಣಿ, ಪೂರ್ಣಿಮಾ ಹಾಗೂ ಶಾಲೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇದೇ ವೇಳೆ ಹೊಸಕೆರೆ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರುಗಳು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಭಾಗವಹಿಸಿ ತರಬೇತಿ ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.














